ಪೋಕ್ಸೋ ಪ್ರಕರಣ: ಆರೋಪಿಗೆ 85 ವರ್ಷ ಕಠಿಣ ಸಜೆ, ಜುಲ್ಮಾನೆ
ಕಾಸರಗೋಡು: 13ರ ಹರೆಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಂತೆ ಆದೂರು ಪೊಲೀಸ್ ಠಾಣೆಯಲ್ಲಿ ದಾಖಲುಗೊಂಡ ಪೋಕ್ಸೋ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಸ್ಪೆಷಲ್ ನ್ಯಾಯಾಲಯದ ನ್ಯಾಯಾಧೀಶರಾದ ರಾಮು ರಮೇಶ್‌ಚಂದ್ರಬಾನು ವಿವಿಧ ಸೆಕ್ಷನ್‌ಗಳಲ್ಲಾಗಿ ಒಟ್ಟು 85 ವರ್ಷ ಕಠಿಣ ಸಜೆ ಹಾಗೂ 3,25,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ತಳಿಪರಂಬ ಚಪ್ಪರಕಡವು ಕಾರಿಯೋಟ್ ಪುದಿಯಪುರೆಯಿಲ್ ಬಿನು ಪಿ.ಪಿ (ವೆಳಿಚ್ಚಂ ವಿನು 45) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 13 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ.
ಆದೂರು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶವೊಂದರ 13 ವರ್ಷದ ಬಾಲಕಿಗೆ ಮನೆಯಲ್ಲಿ 2019 ಜೂನ್ 3ರಂದು ರಾತ್ರಿ ಮನೆಯಲ್ಲಿ ಹಾಗೂ ಬಳಿಕ 2019 ಡಿಸೆಂಬರ್ 14ರಂದು ಇನ್ನೊಂದು ಮನೆಯಲ್ಲಿ ಕಿರುಕುಳ ನೀಡಿದ ದೂರಿನಂತೆ ಆರೋಪಿ ವಿರುದ್ಧ ಆದೂರು ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಆದೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಪ್ರೇಮ್ ಸದನ್ ಈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರೋಸಿಕ್ಯೂಶನ್ ಪರ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಪ್ರಿಯಾ ಎ.ಕೆ. ನ್ಯಾಯಾಲಯದಲ್ಲಿ ವಾದಿಸಿದ್ದರು.