ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪಿ.ಎಂ. ಸುರೇಶ್ ಅವರು 20 ವರ್ಷ, 6 ತಿಂಗಳ ಕಠಿಣ ಸಜೆ ಹಾಗೂ 16,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ಮುಳಿಯಾರು ಪೈಕದ ಕೆ. ನಿತ್ಯಾನಂದ (29) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 8 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
2023 ಜುಲೈ 21ರಂದು ಆದೂರು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ 14 ವರ್ಷದ ಬಾಲಕಿಯನ್ನು ಜನವಾಸವಿಲ್ಲದ ಕಟ್ಟಡಕ್ಕೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಆದೂರು ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದು ಆದೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಎ. ಅನಿಲ್ ಕುಮಾರ್ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋ ಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ. ಪ್ರೋಸಿಕ್ಯೂಷನ್ ಪರ ಹೊಸದುರ್ಗ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎ. ಗಂಗಾಧರನ್ ನ್ಯಾಯಾಲಯದಲ್ಲಿ ವಾದಿಸಿದ್ದರು.





