ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಹೊಸದುರ್ಗ ಫಾಸ್ಟ್ ಟ್ರಾಕ್ ಸ್ಪೆಷಲ್‌ನ್ಯಾಯಾಲಯದ ನ್ಯಾಯಾಧೀಶರಾದ ಪಿ.ಎಂ. ಸುರೇಶ್ ಅವರು ಆರು ವರ್ಷ ಕಠಿಣ ಸಜೆ ಹಾಗೂ 30,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ಕರ್ನಾಟಕ ಬಾಳೆಹೊಸೂರು ಭೀರಪ್ಪ ದೇವಸ್ಥಾನ ಬಳಿಯ ಹೇಲಪ್ಪ ಸುಬ್ಬಣ್ಣ ಇರೆಗಾರ (36) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
೨೦೨೫ ಜುಲೈ ೧೬ರಂದು ಮೇಲ್ಪರಂಬ ಪೊಲೀಸ್ ಠಾಣೆಯ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಮೇಲ್ಪರಂಬ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಎಸ್‌ಐ ಎ.ಎನ್.ಸುರೇಶ್ ಕುಮಾರ್ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿದೆ.
ಪ್ರೋಸಿಕ್ಯೂಷನ್ ಪರ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎಂ. ಗಂಗಾಧರನ್ ನ್ಯಾಯಾಲಯದಲ್ಲಿ ವಾದಿಸಿದ್ದರು.






