ಕಾಸರಗೋಡು: ಹತ್ತು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್ ಟ್ರಾಕ್ ಆಂಡ್ ಸ್ಪೆಷಲ್ ಕೋರ್ಟ್‌ನ ನ್ಯಾಯಾಧೀಶ ರಾದ ಕೆ. ಸುರೇಶ್ ಕುಮಾರ್ 15 ವರ್ಷ ಕಠಿಣ ಸಜೆ ಮತ್ತು 75,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮಂಗಲ್ಪಾಡಿ ಅಡ್ಕ ವೀರನಗರ ನಿವಾಸಿ ಪವಿತ್ರ ಕುಮಾರ್ (45) ಎಂಬಾತನಿಗೆ ಈ ಶಿಕ್ಷೆ ವಿಧಿಸ ಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಹತ್ತರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು.
ಅಂದು ಕುಂಬಳೆ ಪೊಲೀಸ್ ಠಾಣೆ ಎಸ್‌ಐ ಆಗಿದ್ದ ಎಸ್.ಆರ್. ರಜಿತ್ ಈ ಬಗ್ಗೆ ಮೊದಲು ತನಿಖೆ ನಡೆಸಿದ್ದರು. ನಂತರ ಎಸ್‌ಐ ವಿ.ಕೆ.ಅನೀಶ್ ಈ ಬಗ್ಗೆ ಮುಂದಿನ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರೋಸಿಕ್ಯೂಶನ್ ಪರ ಸ್ಪೆಷಲ್ ಪ್ರೋಸಿಕ್ಯೂಟರ್ ಎ.ಕೆ. ಪ್ರಿಯಾ ನ್ಯಾಯಾಲಯದಲ್ಲಿ ವಾದಿಸಿದ್ದರು.






