ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು ಪೂರ್ವಾಹ್ನ 10೮ ತೆಂಗಿನಕಾಯಿಯ ಗಣಪತಿಹೋಮ ಬಳಿಕ ಶ್ರೀ ಉದನೇಶ್ವರ ದೇವರು, ಕುಟ್ಟಿಚ್ಚಾತ ಸಹಿತ ಪರಿವಾರ ದೇವತಾ ಪ್ರತಿಷ್ಠೆ ನಡೆಯಿತು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕ್ಷೇತ್ರಾಚಾರ್ಯ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠೆ, ಜೀವ ಕಲಶಾಭಿಷೇಕ ನಡೆಯಿತು. ಎಪ್ರಿಲ್ ೨೬ರಂದು ಸಹಸ್ರ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಎಡನೀರು ಮಠಾಧೀಶಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಉಡುಪಿ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಮಾಣಿಲ ಶ್ರೀಧಾಮದ ಶ್ರೀ ಯೋಗೀ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುವುದು. ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ಸ್ವಾಮೀಜಿಯವರು ಆಶೀರ್ವಚನ ನೀಡುವರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸುವರು. ಪಂಜ ಭಾಸ್ಕರ ಭಟ್ ಧಾರ್ಮಿಕ ಭಾಷಣ ಮಾಡುವರು. ಹಲವರು ಗಣ್ಯರು ಉಪಸ್ಥಿತರಿರುವರು.





