ಪೆರ್ಲ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಸರಕಾರಿ ಆಸ್ಪತ್ರೆಗಳಲ್ಲಿ ಖಾಯಂ ಸ್ತ್ರೀರೋಗ ತಜ್ಞರ ಸೇವೆ ಹಾಗೂ ಆಧುನಿಕ ಹೆರಿಗೆ ವಾರ್ಡ್ ಸೇರಿದಂತೆ ಅಗತ್ಯ ಹೆರಿಗೆ ಚಿಕಿತ್ಸಾ ಸೌಲಭ್ಯಗಳನ್ನು ತುರ್ತಾಗಿ ಒದಗಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ಆರೋಗ್ಯ ಸಚಿವ ಕೆ. ಮುರಳೀಧರನ್ರಿಗೆ ಮನವಿ ಸಲ್ಲಿಸಿದೆ. ಎಣ್ಮಕಜೆ ಸೇರಿದಂತೆ ಸುಮಾರು ಎಂಟು ಪಂಚಾಯತ್ಗಳನ್ನು ಒಳಗೊಂಡಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಖಾಯಂ ಸ್ತ್ರೀರೋಗ ತಜ್ಞರು ಹಾಗೂ ಹೆರಿಗೆ ಚಿಕಿತ್ಸೆಗೆ ಅಗತ್ಯವಾದ ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಹೆರಿಗೆ ಸಂಬAಧಿತ ಚಿಕಿತ್ಸೆ ಹಾಗೂ ತುರ್ತು ವೈದ್ಯಕೀಯ ತಪಾಸಣೆಗಳಿಗಾಗಿ ಗರ್ಭಿಣಿಯರು ಹಲವು ಕಿಲೋಮೀಟರ್ ದೂರ ಪ್ರಯಾಣಿಸಿ ಮಂಗಳೂರು ಅಥವಾ ಕಾಸರಗೋಡು ಜನರಲ್ ಆಸ್ಪತ್ರೆಗಳ ಚಿಕಿತ್ಸಾ ಸೌಲಭ್ಯಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ಸಾಮಾನ್ಯ ಕುಟುಂಬಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಗೂ ಪ್ರಯಾಣದ ತೊಂದರೆ ಉಂಟಾಗುವುದರ ಜೊತೆಗೆ, ತುರ್ತು ಸಂದರ್ಭಗಳಲ್ಲಿ ತಾಯಂದಿರು ಮತ್ತು ನವಜಾತ ಶಿಶುಗಳ ಜೀವಕ್ಕೂ ಅಪಾಯ ಎದುರಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಹಿನ್ನೆಯಲ್ಲಿ ಹಲವು ಪ್ರಮುಖ ಬೇಡಿಕೆಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿನಾಡು ಪ್ರದೇಶದ ಸಾಮಾನ್ಯ ಕುಟುಂಬಗಳ ತಾಯಂದಿರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಸರಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್ ಒತ್ತಾಯಿಸಿದೆ. ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿ ಅಧ್ಯಕ್ಷ ಫಾರೂಕ್ ಪಿ. ಎಂ. ಮನವಿ ಸಲ್ಲಿಸಿದರು. ಮನವಿಯ ಪ್ರತಿಯನ್ನು ಕಾಸರಗೋಡು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳಿಗೂ ಸಲ್ಲಿಸಲಾಗಿದೆ.






